ಅಲ್ಲಮ ಪ್ರಭುಗಳ ವಚನಗಳು
ಹೊನ್ನು ಮಾಯೆಯೆಂಬರು
ಹೊನ್ನು ಮಾಯೆಯಲ್ಲ.
ಹೆಣ್ಣು ಮಾಯೆಯೆಂಬರು
ಹೆಣ್ಣು ಮಾಯೆಯಲ್ಲ.
ಮಣ್ಣು ಮಾಯೆಯೆಂಬರು
ಮಣ್ಣು ಮಾಯೆಯಲ್ಲ.
ಮನದ ಮುಂದಣ ಆಶೆಯೇ ಮಾಯೆ ಕಾಣಾ
ಗುಹೇಶ್ವರ !
ಎತ್ತಣ ಮಾಮರ
ಎತ್ತಣ ಕೋಗಿಲೆ ?
ಎತ್ತಣಿಂದೆತ್ತ ಸಂಬಂಧವಯ್ಯ ?!
ಬೆಟ್ಟದ ನೆಲ್ಲಿಯ ಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣಿಂದೆತ್ತ ಸಂಬಂಧವಯ್ಯಾ ?!
ಗುಹೇಶ್ವರಲಿಂಗಕ್ಕೆಯೂ
ಎನಗೆಯೂ
ಎತ್ತಣಿಂದೆತ್ತ ಸಂಬಂಧವಯ್ಯ ?!
ಬೆಟ್ಟಕ್ಕೆ ಚಳಿಯಾದಡೆ
ಏನ ಹೊದಿಸುವಿರಯ್ಯ !
ಬಯಲು ಬತ್ತಲೆಯಾದಡೆ
ಏನನುಡಿಸುವರಯ್ಯ ?
ಭಕ್ತನು ಭವಿಯಾದಡೆ
ಏನನುಪಮಿಸುವೆನಯ್ಯ – ಗುಹೇಶ್ವರ ?
ಲಿಂಗ ಒಳಗೋ ಹೊಱಗೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಎಡನೋ ಬಲನೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಮುಂದೋ ಹಿಂದೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಸ್ಥೂಲವೋ ಸೂಕ್ಷ್ಮವೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಪ್ರಾಣವೋ, ಪ್ರಾಣ ಲಿಂಗವೋ ?
ಬಲ್ಲಡೆ ನೀವು ಹೇಳಿರೇ ? ಗುಹೇಶ್ವರ
ಬಸವಣ್ಣನವರ ವಚನಗಳು
ಕಳಬೇಡ ಕೊಲಬೇಡ
ಹುಸಿಯನುಡಿಯಲು ಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ದಿ
ಇದೇ ಬಹಿರಂಗ ಶುದ್ದಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
ಲೋಕದ ಡೊಂಕ ನೀವೇಕೆ ತಿದ್ದುವಿರಿ
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ
ನಮ್ಮ ಕೂಡಲಸಂಗಮದೇವಾ.
ಮಾಡಿದೆನೆನ್ನದಿರ ಲಿಂಗಕೆ
ನೀಡಿದೆನೆನ್ನದಿರ ಜಂಗಮಕೆ
ಮಾಡುವ ನೀಡುವ ನಿಜಗುಣವುಳ್ಳವರ ಕೂಡಿಕೊಂಡಿಪ್ಪ ನಮ್ಮ
ಕೂಡಲಸಂಗಮದೇವ
ಮಾಡಿದೆನೆಂಬುದು ಮನದಲಿ ಹೊಳೆದರೆ
ನೀಡಿದೆನೆಂಬುದು ನಿಜದಲಿ ತಿಳಿದರೆ
ಏಡಿಸಿ ಕಾಡಿತ್ತು ಶಿವನ ಡಂಗುರ
ಹಬ್ಬಕ್ಕೆ ತಂದ ಹರಕೆಯ ಕುರಿ
ತೊರಣಕ್ಕೆ ತಂದ ತಳಿರ ಮೇಯಿತು
ಕೊಂದವರೆಂಬುದ ಅರಿಯದೆ ಬೆಂದ ಒಡಲ ಹೊರೆಯ ಹೋಯಿತು
ಅಂದಂದೆ ಹುಟ್ಟಿತು ಅಂದಂದೆ ಹೊಂದಿತ್ತು
ಕೊಂದವರುಳಿವರೆ ಕೂಡಲಸಂಗಮದೇವ
ಎನ್ನ ಕಾಲೆ ಕಂಬ ದೇಹವೇ ದೇಗುಲ
ಶಿರವೇ ಹೊನ್ನ ಕಳಸವಯ್ಯ
ಕೂಡಲಸಂಗಮ ದೇವ ಕೇಳಯ್ಯ
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ
ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ
ಧರೆ ಹತ್ತಿ ಉರಿದರೆ ನಿಲ ಬಾರದು.
ಏರಿ ನೀರುಂಬಡೆ, ಬೇಲಿ ಕೈಯ ಮೇವಡೆ
ನಾರಿ ತನ್ನ ಮನೆಯಲ್ಲಿ ಕಳುವಡೆ
ತಾಯ ಮೊಲೆವಾಲು ನಂಜಾಗಿ ಕೊಲುವಡೆ
ಇನ್ನಾರಿಗೆ ದೂರುವೆ
ತಂದೆ ಕೂಡಲಸಂಗಮದೇವ
ನೀ ಹುಟ್ಟಿಸಿ ಜೀವನ ಭವದುಃಖಿಯ ಮಾಡಿದ ಬಳಿಕ.
ಬಿಡಿಸುವರಾರುಂಟು ?
ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯ.
ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯ.
ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರಯ್ಯ
ಕೂಡಲಸಂಗಮದೇವ
ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು;
ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ!
ಉಂಬ ಜಂಗಮ ಬಂದರೆ ನಡೆ ಎಂಬರು;
ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ!
ನಮ್ಮ ಕೂಡಲಸಂಗನ ಶರಣರ ಕಂಡು
ಉದಾಸೀನವ ಮಾಡಿದರೆ,
ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ!
ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ.
ನೀಡ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ.
ಕೂಡಿಕೊಂಬ ನಮ್ಮ ಕೂಡಲಸಂಗಮದೇವ.
ದೇವಲೋಕ ಮರ್ತ್ಯಲೋಕವೆಂಬುದು
ಬೇರಿಲ್ಲ ಕಾಣಿರಣ್ಣ.
ಸತ್ಯವ ನುಡಿವುದೇ ದೇವಲೋಕ!
ಮಿಥ್ಯವ ನುಡಿವುದೇ ಮರ್ತ್ಯಲೋಕ!
ಆಚಾರವೇ ಸ್ವರ್ಗ! ಅನಾಚಾರವೇ ನರಕ!
ನೀವೇ ಪ್ರಮಾಣ ಕೂಡಲಸಂಗಮದೇವ.
ಏನಿ ಬಂದಿರಿ, ಹದುಳಿದ್ದಿರೆಂದರೆ
ನಿಮ್ಮ ಮೈಸಿರಿ ಹಾರಿಹೋಹುದೇ ?
ಕುಳ್ಳಿರೆಂದರೆ ನೆಲ ಕುಳಿಹೋಹುದೇ ?
ಒಡನೆ ನುಡಿದರೆ ಶಿರಹೊಟ್ಟೆ ಒಡೆವುದೆ ?
ಕೊಡಲಿಲ್ಲದಿದ್ದರೊಂದು
ಗುಣವಿಲ್ಲದಿದ್ದರೆ
ಕೆಡಹಿ ಮೂಗ ಕೊಯ್ವುದ ಮಾಬನೆ ಕೂಡಲಸಂಗಯ್ಯ ?
ದಯವಿಲ್ಲದ ಧರ್ಮವದೇವುದಯ್ಯ,
ದಯವೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ!
ದಯವೇ ಧರ್ಮದ ಮೂಲವಯ್ಯ.
ಕೂಡಲಸಂಗಯ್ಯನಂತಲ್ಲದೊಲ್ಲ ಕಂಡಯ್ಯ.
ತನಗೆ ಮುನಿವರಿಗೆ ತಾ ಮುನಿಯಲೇಕಯ್ಯ ?
ತನಗಾದ ಆಗೇನು ? ಅವರಿಗಾದ ಚೇಗೇನು ?
ತನುವಿನ ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವ.
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ,
ಅಂಬುಜಕ್ಕೆ ಭಾನುವಿನ ಉದಯದ ಚಿಂತೆ.
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ.
ಎನಗೆ ನಮ್ಮ ಕೂಡಲಸಂಗಮದೇವರ
ನೆನೆವುದೇ ಚಿಂತೆ!
ವಚನದಲ್ಲಿ ನಾಮಾಮೃತ ತುಂಬಿ.
ನಯನದಲ್ಲಿ ನಿಮ್ಮ ಮೂರುತಿ ತುಂಬಿ,
ಮನದಲ್ಲಿ ನಿಮ್ಮ ನೆನಹು ತುಂಬಿ;
ಕಿವಿಯಲ್ಲಿ ನಿಮ್ಮ ಕೀರುತಿ ತುಂಬಿ;
ಕೂಡಲಸಂಗಮದೇವ,
ನಿಮ್ಮ ಚರಣಕಮಲದೊಳಗಾನು ತುಂಬಿ!
ಎನ್ನ ಕಾಯವ ದಂಡಿಗೆಯ ಮಾಡಯ್ಯ,
ಎನ್ನ ಶಿರವ ಸೋರೆಯ ಮಾಡಯ್ಯ,
ಎನ್ನ ನರವ ತಂತಿಯ ಮಾಡಯ್ಯ,
ಎನ್ನ ಬೆರಲ ಕಡ್ಡಿಯ ಮಾಡಯ್ಯ,
ಬತ್ತೀಸ ರಾಗವ ಹಾಡಯ್ಯ,
ಉರದಲೊತ್ತಿ ಬಾಜಿಸು ಕೂಡಲಸಂಗಮದೇವ
ಪರಚಿಂತೆ ಎಮಗೇಕಯ್ಯ ?
ನಮ್ಮ ಚಿಂತೆ ಎಮಗೆ ಸಾಲದೆ ?
ಕೂಡಲಸಂಗಯ್ಯ ಒಲಿದಾನೋ ಒಲಿಯನೋ
ಎಂಬ ಚಿಂತೆ
ಹಾಸಲುಂಟು ಹೊದಿಯಲುಂಟು!
ಕೊಲುವವನೇ ಮಾದಿಗ!
ಹೊಲಸ ತಿಂಬವನೇ ಹೊಲೆಯ!
ಕುಲವೇನೋ ? ಆವದಿರ ಕುಲವೇನೋ ?
ಸಕಲ ಜೀವಾತ್ಮರಿಗೆ ಲೇಸನೇ ಬಯಸುವ
ನಮ್ಮ ಕೂಡಲಸಂಗನ ಶರಣರೇ ಕುಲಜರು!
ಆನೆಯನೇರಿಕೊಂಡು ಹೋದಿರಿ ನೀವು,
ಕುದುರೆಯನೇರಿಕೊಂಡು ಹೋದಿರಿ ನೀವು.
ಕುಂಕುಮ-ಕಸ್ತುರಿಯ ಪೂಸಿಕೊಂಡು ಹೋದಿರಿ ಅಣ್ಣಾ;
ಸತ್ಯದ ನಿಲುವನರಿಯದೆ ಹೋದಿರಲ್ಲಾ!
ಸದ್ಗುಣವೆಂಬ ಫಲವ ಬಿತ್ತದೆ ಬೆಳೆಯದೆ ಹೋದಿರಲ್ಲಾ
ಅಹಂಕಾರವೆಂಬ ಮದಗಜವನೇರಿ
ವಿಧಿಗೆ ಗುರಿಯಾಗಿ ನೀವು ಕೆಟ್ಟು ಹೋದಿರಲ್ಲಾ!
ನಮ್ಮ ಕೂಡಲಸಂಗಮದೇವನನರಿಯದೆ
ನರಕಕ್ಕೆ ಭಾಜನವಾದಿರಲ್ಲಾ!
ನುಡಿದರೆ ಮುತ್ತಿನ ಹಾರದಂತಿರಬೇಕು!
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು!
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು!
ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು ?
ನುಡಿಯೊಳಗಾಗಿ ನಡೆಯದಿದ್ದರೆ
ಕೂಡಲಸಂಗಮದೇವನೆಂತೊಲಿವನಯ್ಯ ?
ಉಳ್ಳವರು ಶಿವಾಲಯವ ಮಾಡಿಹರು!
ನಾನೇನ ಮಾಡುವೆ ? ಬಡವನಯ್ಯ!
ಎನ್ನ ಕಾಲೇ ಕಂಬ, ದೇಹವೇ ದೇಗುಲ,
ಶಿರವೇ ಹೊನ್ನ ಕಳಶವಯ್ಯ!
ಕೂಡಲಸಂಗಮದೇವ ಕೇಳಯ್ಯ,
ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ!
ಸಮುದ್ರ ಘನವೆಂಬೆನೆ ?
ಧರೆಯ ಮೇಲಡಗಿತ್ತು!
ಧರೆ ಘನವೆಂಬೆನೆ ?
ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು!
ನಾಗೇಂದ್ರ ಘನವೆಂಬೆನೆ ?
ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು!
ಅಂಥ ಪಾರ್ವತಿ ಘನವೆಂಬೆನೆ ?
ಪರಮೇಶ್ವರನ ಅರ್ಧಾಂಗಿಯಾದಳು!
ಅಂಥ ಪರಮೇಶ್ವರ ಘನವೆಂಬೆನೆ ?
ನಮ್ಮ ಕೂಡಲಸಂಗನ ಶರಣರ
ಮನದ ಕೊನೆಯ ಮೊನೆಯ ಮೇಲಡಗಿದನು!
ನೆಲನೊಂದೇ ಹೊಲೆಗೇರಿ, ಶಿವಾಲಯಕ್ಕೆ!
ಜಲವೊಂದೇ ಶೌಚಾಚಮನಕ್ಕೆ!
ಕುಲವೊಂದೇ ತನ್ನ ತಾನರಿದವಂಗೆ!
ಫಲವೊಂದೇ ಷಡುದರ್ಶನ ಮುಕ್ತಿಗೆ!
ನಿಲವೊಂದೇ, ಕೂಡಲಸಂಗಮದೇವ,
ನಿಮ್ಮನರಿದವಂಗೆ.
ಬಸವ ಬಾರಯ್ಯ,
ಮರ್ತ್ಯಲೋಕದೊಳಗೆ ಭಕ್ತರುಂಟೆ ಹೇಳಯ್ಯ ?
ಮತ್ತಾರು ಇಲ್ಲಯ್ಯ, ಮತ್ತಾರು ಇಲ್ಲಯ್ಯ !
ನಾನೊಬ್ಬನೇ ಭಕ್ತನು,
ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ
ಜಂಗಮಲಿಂಗ ನೀನೇ ಅಯ್ಯ ಕೂಡಲಸಂಗಮದೇವ!!
ಅಕ್ಕ ಮಹಾದೇವಿಯ ವಚನ
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
ಮನಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಹದುಳಿಗರಲ್ಲದವರಲ್ಲಿ ಗಂದಾಕ್ಷತೆಯನೊಲ್ಲೆಯಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
ಭಾವಶುದ್ಧವಿಲ್ಲದವರಲಿ ಧೂಪವನೊಲ್ಲೆಯಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
ತ್ರಿಕರಣಶುದ್ಧವಿಲ್ಲದವರಲಿ ತಾಂಬೂಲವನೊಲ್ಲೆಯಯ್ಯ ನೀನು
ಹೃದಯಕಮಲ ಅರಳದವರಲಿ ಇರಲೊಲ್ಲೆಯಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
ಚೆನ್ನಮಲ್ಲಿಕಾರ್ಜುನಯ್ಯ
ಸರ್ವಜ್ಞನ ವಚನಗಳು
ಸರ್ವಜ್ಞನೆಂಬುವನು ಗರ್ವದಿಂದಾದವನೆ?
ಸರ್ವರೊಳಗೊಂದು ನುಡಿಗಲಿತು ವಿದ್ಯೆಯ
ಪರ್ವತವೇ ಆದ ಸರ್ವಜ್ಞ
ಜಾತಿಹೀನನ ಮನೆಯ ಜ್ಯೊತಿ ತಾ ಹೀನವೆ?
ಜಾತಂಗೆ ಜಾತನೆನಲೇಕೆ? ಅರುವಿಡಿ
ದಾತನೇ ಜಾತ ಸರ್ವಜ್ಞ
ಮಜ್ಜಿಗೂಟಕೆ ಲೇಸು ಮಜ್ಜನಕೆ ಮಡಿ ಲೇಸು
ಕಜ್ಜಾಯ ತುಪ್ಪ ಉಣ ಲೇಸು – ಮನೆಗೊಬ್ಬ
ಅಜ್ಜಿಯೇ ಲೇಸು ಸರ್ವಜ್ಞ
ಸಾಲವನು ಕೊಂಬಾಗ ಹಾಲೋಗರುಂಡಂತೆ
ಸಾಲಿಗನು ಬಂದು ಎಳೆವಾಗ
ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ
ಚಿತ್ತವಿಲ್ಲದೆ ಗುಡಿಯ ಸುತ್ತಿದೊಡೆ ಫಲವೇನು
ಎತ್ತು ಗಾಣವನು ಹೊತ್ತು ತಾ
ನಿತ್ಯದಲಿ ಸುತ್ತಿ ಬಂದಂತೆ ಸರ್ವಜ್ಞ
ಮೂರ್ಖನಿಗೆ ಬುದ್ಧಿಯನು ನೂರ್ಕಾಲ ಹೇಳಿದರೆ
ಗೋರ್ಕಲ್ಲ ಮೇಲೆ ಮಳೆ ಹೊಯ್ದರೆ
ಕಲ್ಲು ನೀರ್ಕುಡಿಯುವದೆ ಸರ್ವಜ್ಞ
ಎಲ್ಲ ಬಲ್ಲವರಿಲ್ಲ ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ
ಎಲ್ಲರಿಗೆ ಇಲ್ಲ ಸರ್ವಜ್ಞ